ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ಇನ್ಮುಂದೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಬೀಳಲಿದೆ. ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಜಿಬಿಎ (GBA) ಮುಂದಾಗಿದ್ದು, ಸೇಫ್ ಸಿಟಿ ಯೋಜನೆಯಡಿ ಮತ್ತಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಯೋಜನೆ ರೂಪಿಸಿದೆ.
ನಗರದ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಿಗೆ ಕಸ ಹಾಕುವವರನ್ನು ಗುರುತಿಸಿ, ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಸೇಫ್ ಸಿಟಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಬಿಎ ಸಿದ್ಧತೆ ನಡೆಸಿದೆ.
ಈಗಾಗಲೇ ಜಿಬಿಎ ವ್ಯಾಪ್ತಿಯಲ್ಲಿ ಸರ್ಕಾರದ ವತಿಯಿಂದ 7 ಸಾವಿರಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಕಣ್ಗಾವಲು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯವಿರುವ ಸ್ಥಳಗಳಲ್ಲಿ ಹೆಚ್ಚುವರಿ ಕ್ಯಾಮೆರಾಗಳನ್ನು ಅಳವಡಿಸಲು ಯೋಜಿಸಲಾಗಿದೆ.
ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಸಿಸಿಟಿವಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ನಗರದ ಸ್ವಚ್ಛತೆ ಮತ್ತು ಸುರಕ್ಷತೆ ಎರಡಕ್ಕೂ ಒತ್ತು ನೀಡಲು ಜಿಬಿಎ ಮುಂದಾಗಿದೆ. ಸಿಸಿಟಿವಿ ಕ್ಯಾಮೆರಾಗಳು ಪೊಲೀಸರ ನಿಗಾದಲ್ಲಿದ್ದು, ಅಗತ್ಯವಿರುವ ಕಡೆಗಳಲ್ಲಿ ಇನ್ನಷ್ಟು ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಜಿಬಿಎ ಆಯುಕ್ತರು ತಿಳಿಸಿದ್ದಾರೆ.
ಇದರೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರ ಮೇಲೆ ನಿಗಾ ಇಡುವುದರ ಜತೆಗೆ ಮಹಿಳೆಯರ ಸುರಕ್ಷತೆಗೂ ಸಿಸಿಟಿವಿ ಕಣ್ಗಾವಲು ಮತ್ತಷ್ಟು ಬಲ ಸಿಗಲಿದೆ. ಒಟ್ಟಿನಲ್ಲಿ ಬೆಂಗಳೂರಿನ ಸ್ವಚ್ಛತೆ ಹಾಗೂ ಸುರಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಜಿಬಿಎ ಹೊಸ ಹೆಜ್ಜೆ ಇಡಲು ಮುಂದಾಗಿದೆ.



