ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ಶಿಸ್ತುಬದ್ಧ, ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಯನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ಅಥವಾ ನಿಯಮ ಉಲ್ಲಂಘನೆಗೆ ಅವಕಾಶ ನೀಡಬಾರದು. ಪರೀಕ್ಷಾ ಪ್ರಾಧಿಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ ಅವರು, ಪ್ರತಿಯೊಂದು ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ, ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ, ಶುದ್ಧ ಕುಡಿಯುವ ನೀರು, ಬೆಳಕು, ಗಾಳಿ ಹಾಗೂ ಅಗತ್ಯ ಪೀಠೋಪಕರಣಗಳ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಪರೀಕ್ಷೆಗಳು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರದ ಮೇಲೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಮಾಹಿತಿ ನೀಡಿ, ಜಿಲ್ಲೆಯಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 3,575 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಪೂರ್ಣಗೊಂಡಿದೆ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಅತ್ಯಂತ ಪಾರದರ್ಶಕ ಹಾಗೂ ಶಿಸ್ತುಬದ್ಧವಾಗಿ ನಡೆಯಬೇಕು. ಯಾವುದೇ ಲೋಪ, ನಿರ್ಲಕ್ಷ್ಯ ಅಥವಾ ನಿಯಮ ಉಲ್ಲಂಘನೆಗೆ ಅವಕಾಶ ನೀಡದೆ ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ



