ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಗ್ಯಾರಂಟಿ ಕಾರ್ಡ್‌ಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ವರುಣಾ ಕ್ಷೇತ್ರದಲ್ಲಿ ಕೆಎಂ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಜಾಗೊಳಿಸಿದೆ.
ಸಿದ್ದರಾಮಯ್ಯನವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ್ ಅವರು ಚುನಾವಣಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಸಹ ಆಕ್ಷೇಪಣೆ ಸಲ್ಲಿಸಿದ್ದರು.
ಅಷ್ಟೇ ಅಲ್ಲದೇ ಈ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಶಂಕರ್ ಅವರ ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.