HomeDharwadಏಕೀಕರಣದ ಕಿಚ್ಚು ಮೂಡಿಸಿದ್ದು ಧಾರವಾಡ

ಏಕೀಕರಣದ ಕಿಚ್ಚು ಮೂಡಿಸಿದ್ದು ಧಾರವಾಡ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : 69ನೇ ಕನ್ನಡ ಹಬ್ಬವನ್ನು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿಂದ ಧ್ವಜಾರೋಹಣ ಮಾಡುವ ಮೂಲಕ ಆಚರಿಸುತ್ತಿದ್ದೇವೆ. ಇದು ನಮಗೆಲ್ಲರಿಗೂ ಪ್ರಮುಖ ಮತ್ತು ಹೆಮ್ಮೆಯ ಹಬ್ಬವಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಅವರು ಶುಕ್ರವಾರ ಬೆಳಿಗ್ಗೆ ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕರ್ನಾಟಕ ಏಕೀಕರಣ ದೇಶದ ಸ್ವಾತಂತ್ರ‍್ಯ ಹೋರಾಟದಷ್ಟೇ ಪ್ರಾಮುಖ್ಯತೆ ಪಡೆದಿದೆ. ಇದೇ ಸಂದರ್ಭದಲ್ಲಿ ಭೌಗೋಳಿಕವಾಗಿ 19 ವಿವಿಧ ಆಡಳಿತ ಭಾಗಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡದ ಮನಸ್ಸುಗಳನ್ನು ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ 1956ರಲ್ಲಿ ಒಗ್ಗೂಡಿಸಲಾಯಿತು. ಕನ್ನಡ ಮಾತನಾಡುವ ವಿವಿಧ ಭಾಗಗಳು ಸೇರಿ ಮೈಸೂರು ರಾಜ್ಯ ಉದಯವಾಯಿತು ಎಂದರು.

ಕರ್ನಾಟಕ ಏಕೀಕರಣ ಚಳವಳಿಯನ್ನು ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ. ಈ ಸಂಗತಿ ನಮ್ಮೆಲ್ಲರ ಅಭಿಮಾನದ ಸಂಕೇತವಾಗಿದೆ. ಏಕೀಕರಣ ಚಳವಳಿಯ ಪ್ರಮುಖರಾದ ಆಲೂರ ವೆಂಕಟರಾವ್, ರಾ.ಹ. ದೇಶಪಾಂಡೆ, ಡೆಪ್ಯೂಟಿ ಚನ್ನಬಸಪ್ಪ, ಅದರಗುಂಚಿ ಶಂಕರಗೌಡ ಪಾಟೀಲ ಮತ್ತು ಇತರರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕರ್ನಾಟಕವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಜ್ಯವಾಗಿದೆ. ಕನ್ನಡ ಭಾಷೆಯು ನಮ್ಮ ಪರಂಪರೆ, ಸಾಹಿತ್ಯವನ್ನು ಸಾರಿ ಹೇಳುತ್ತದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿಗಳು, ಅಂಗಡಿಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ.

ಇಂದು ರಾಜ್ಯದಾದ್ಯಂತ ಸರ್ಕಾರದಿಂದ ಕನ್ನಡಾಂಬೆಗೆ ನುಡಿ-ನಮನ ಅರ್ಪಿಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರೊ. ಐ.ಜಿ. ಸನದಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿ.ಪಂ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ್ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಡಾ ಆಯುಕ್ತ ಡಾ.ಸಂತೋಷ ಬಿರಾದಾರ, ಜಿ.ಪಂ ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ತಹಸೀಲ್ದಾರ ಡಿ.ಎಚ್. ಹೂಗಾರ, ಕೆ.ಆರ್. ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಾವು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇವೆ, ಬರೆಯುತ್ತೇವೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇವೆ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಶ್ರಮಿಸುತ್ತೇವೆ ಎಂದು ಪ್ರಮಾಣ ಮಾಡೋಣ ಎಂದು ಸಾರ್ವಜನಿಕರಲ್ಲಿ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!