ಬೆಂಗಳೂರು:- ನಾಳೆಯೂ ಭಾರೀ ಮಳೆ ಸುರಿಯೋ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜ್ಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆಯೂ ಸಹ ರಜೆ ಮುಂದುವರೆಸಲಾಗಿದೆ. ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 19 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಮಾಹಿತಿ ನೀಡಿದ್ದಾರೆ
ಶಿವಮೊಗ್ಗದಲ್ಲೂ ಮಳೆ ಮುಂದುವರೆದಿದೆ. ನಾಳೆಯೂ ಭಾರೀ ಮಳೆಯಾಗ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಶುಕ್ರವಾರ ಹೊಸನಗರ ತಾಲೂಕಿನಾದ್ಯಂತ ಅಂಗನವಾಡಿ ಸೇರಿದಂತೆ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಈ ಬಗ್ಗೆ ಆದೇಶ ನೀಡಿದ್ದಾರೆ.
ಕೊಡಗಿನಲ್ಲಿ ಭಾರೀ ಗಾಳಿ ಮಳೆ ಮುಂದುವರೆದಿದೆ. ನಾಳೆ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ
ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಇರುವುದಿಲ್ಲ ಅಂತ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ
ಹಾಸನ ಜಿಲ್ಲೆಯಲ್ಲೂ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ನಾಳೆ ಹಾಸನ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ..
ಕರಾವಳಿಯ ಮತ್ತೊಂದು ಜಿಲ್ಲೆ ಉಡುಪಿಯಲ್ಲೂ ಮಳೆ ಮುಂದುವರೆದಿದೆ. ಉಡುಪಿಯಲ್ಲಿ ನಾಳೆಯೂ ಭಾರೀ ಮಳೆ ಮುಂದುವರೆಯಲಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ