ಮಡಿಕೇರಿ: ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು.ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು.
ವರ್ಷಕ್ಕೊಮ್ಮೆ ಜರುಗುವ ದೇಶದ ಪವಿತ್ರ ತೀರ್ಥೋದ್ಭವ ಸಂಭ್ರಮ ಇಂದು ನಡೆಯಿತು. ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನವಾದಳು. ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿ, ಮೂರು ಬಾರಿ ಉಕ್ಕಿ ಬಂದಳು. ಬಳಿಕ ಅರ್ಚಕರು ನೆರೆದಿರುವ ಭಕ್ತರಿಗೆ ಬ್ರಹ್ಮಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಿದರು.
ರಾಜ್ಯದ ಬೇರೆ ಬೇರೆ ಭಾಗಗಳಿಂದ ಮಂಡ್ಯ, ಮೈಸೂರು, ಹಾಸನ ಹಾಗೂ ಬೇರೆ ರಾಜ್ಯಗಳಾದ ತಮಿಳುನಾಡು, ಕೇರಳದಿಂದ ಸಹಸ್ರ ಸಂಖ್ಯೆಯಲ್ಲಿ ಭಕ್ತರ ಆಗಮಿಸಿದ್ದರು. ಇನ್ನೂ ತೀರ್ಥ ರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಭಕ್ತಗಣ ಕಾತುರದಿಂದ ಕಾದು, ಉಕ್ಕಿ ಬಾ ಕಾವೇರಮ್ಮೆ, ಕಾವೇರಿ ಬಾಳು ಎಂದು ಭಜಿಸುತ್ತಿದ್ದರು.