ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಸಂಚರಿಸುತ್ತಿದ್ದ ಬೆಂಜ್ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವತಿಯ ಗುರುತು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.



