ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಹೊಸಪೇಟೆಯಿಂದ ಬೆಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದು ಜಖಂಗೊಂಡ ಘಟನೆ ಹಿರಿಯೂರು ತಾಲ್ಲೂಕಿನ ಫ್ಲೈಓವರ್ ಔಟರಿಂಗ್ ಬಳಿ ನಡೆದಿದೆ.
ಶುಕ್ರವಾರ ಮುಂಜಾನೆ ನಡೆದ ಈ ಅಪಘಾತದಲ್ಲಿ ಆಂಬುಲೆನ್ಸ್‌ನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದ್ದು, ಅಪಘಾತದ ತೀವ್ರತೆ ಎಷ್ಟಿತ್ತು ಎಂಬುದು ದೃಶ್ಯಗಳಿಂದಲೇ ಸ್ಪಷ್ಟವಾಗುತ್ತಿದೆ. ರೋಗಿಯನ್ನು ತುರ್ತು ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ರೋಗಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ, ವಾಹನ ಸಂಚಾರವನ್ನು ಮರುಸ್ಥಾಪಿಸಿದರು.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದು, ವಿಶೇಷವಾಗಿ ಮುಂಜಾನೆ ವೇಳೆಯ ಸಂಚಾರದಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.



