ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಟ್ಟಡ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತನ ತಲೆಯ ಮೇಲೆ ಟ್ರಕ್ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಬಿಹಾರ ಮೂಲದ ಬಾಬುಜೀ ಮಿಯಾ (45) ಎಂದು ಗುರುತಿಸಲಾಗಿದೆ. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಾಬುಜೀ ಮಿಯಾ, ಇಂದು ಕೆಲಸಕ್ಕೆಂದು ಉತ್ತರಹಳ್ಳಿಯಿಂದ ಸರ್ಜಾಪುರದ ಕಡೆಗೆ ತೆರಳುತ್ತಿದ್ದರು.
ಈ ವೇಳೆ ಎಲೆಕ್ಟ್ರಾನಿಕ್ ಸಿಟಿಯ ನೈಸ್ ಟೋಲ್ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಾಬುಜೀ ಮಿಯಾ ಅವರ ತಲೆಯ ಮೇಲೆ ಟ್ರಕ್ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಪಘಾತಕ್ಕೆ ಕಾರಣ ಹಾಗೂ ಪರಾರಿಯಾಗಿರುವ ಟ್ರಕ್ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



