ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸರ್ವೀಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ.
ರಾಮನಗರ ತಾಲೂಕಿನ ದಾರಾಪುರ ಗ್ರಾಮದ ನಿವಾಸಿ ನಿತಿನ್ (21) ಮೃತಪಟ್ಟ ಯುವಕ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸೇವಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಸೋಮವಾರ ರಾತ್ರಿ ನಿತಿನ್ ಮತ್ತು ಸೇವಂತ್ ಕೆಲಸ ಮುಗಿಸಿಕೊಂಡು ಸ್ಕೂಟಿಯಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದರು. ಕೆಂಪನಹಳ್ಳಿ ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಸ್ಕೂಟಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ನಿತಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಸೇವಂತ್ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.



