ದಿಸ್ಪುರ್: ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕರ್ನಾಟಕ ನೋಂದಣಿಯ ಕಂಟೈನರ್ಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ 23 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಬೊಕಾಖಾಟ್ನಿಂದ ನಗಾಂವ್ ಕಡೆಗೆ ಪ್ರಯಾಣಿಸುತ್ತಿದ್ದ ಟೆಂಪೋ ಟ್ರಾವೆಲರ್ ಮತ್ತು ಕಂಟೈನರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಟೆಂಪೋ ಟ್ರಾವೆಲರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿಕೊಂಡಿದ್ದವರನ್ನು ಹೊರತೆಗೆಯಲು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಮೊದಲಿಗೆ ಕೊಹೊರಾ ಮಾದರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೋರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
ಘಟನೆ ಕುರಿತು ಮಾಹಿತಿ ನೀಡಿರುವ ಗೋಲಾಘಾಟ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ, ಅಪಘಾತದಲ್ಲಿ 23 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಾಥಮಿಕ ವರದಿಗಳು ಬಂದಿವೆ ಎಂದು ತಿಳಿಸಿದ್ದಾರೆ. ಟೆಂಪೋ ಟ್ರಾವೆಲರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವುದರಿಂದ ಅದರೊಳಗೆ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಇನ್ನೂ ಮುಂದುವರಿದಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಇನ್ನು ಸ್ಥಳೀಯ ಶಾಸಕರೂ ಆಗಿರುವ ಅಸ್ಸಾಂ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಅತುಲ್ ಬೋರಾ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.
ಟೆಂಪೋ ಟ್ರಾವೆಲರ್ ಅತಿವೇಗದಲ್ಲಿ ಚಲಿಸುತ್ತಿತ್ತು ಮತ್ತು ಉದ್ಯಾನವನದ ಸಮೀಪ ವಿಧಿಸಲಾಗಿದ್ದ ಸಂಚಾರ ನಿಯಮಗಳನ್ನು ಉಲ್ಲಂಘಿಸಿತ್ತು ಎಂದು ಪೊಲೀಸ್ ಅಧಿಕಾರಿ ಸ್ವಪ್ನನೀಲ್ ದೇಕಾ ತಿಳಿಸಿದ್ದಾರೆ. ಅಪಘಾತದ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









