ಬೆಂಗಳೂರು: ರಾಜಧಾನಿ ಬೆಂಗಳೂರಿನ ಗೊರಗುಂಟೆಪಾಳ್ಯ ಟಿಎಂಟಿ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಗೂಡ್ಸ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಹಾಗೂ ಪುರುಷ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಹಾಗೂ ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.



