ಚಿತ್ರದುರ್ಗ: ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ 14 ವರ್ಷದ ಪ್ರಯಾಣಿಕ ಗಗನ್ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕ ರಾಜು ನಾಯ್ಕ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸಿಪಿಐ ಬಾಲಚಂದ್ರ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.









