ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಮೃತರನ್ನು ಗಾನವಿ (20) ಮತ್ತು ವೈಷ್ಣವಿ (20) ಎಂದು ಗುರುತಿಸಲಾಗಿದೆ.
ಕುಣಿಗಲ್ನಲ್ಲಿ ಆಯೋಜಿಸಲಾಗಿದ್ದ ಆ್ಯಕ್ಟಿವಿಟಿ ಕ್ಲಾಸ್ನಲ್ಲಿ ಭಾಗವಹಿಸಲು ಇಬ್ಬರು ಯುವಕರು ಹಾಗೂ ನಾಲ್ವರು ಯುವತಿಯರು ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಬೆಂಗಳೂರಿನಿಂದ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳ ಪೈಕಿ ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಿಬ್ಬರಿಗೆ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.









