ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ.
ಅಪಘಾತದ ಭೀಕರ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಆ್ಯಂಬ್ಯುಲೆನ್ಸ್ ಚಾಲಕನ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



