ಬೆಂಗಳೂರು: ತ್ರಿಬಲ್ ರೈಡಿಂಗ್ ಮಾಡಿಕೊಂಡು ಹೋಗುತ್ತಿದ್ದ ಬುಲೆಟ್ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಯಲಹಂಕ ನ್ಯೂ ಟೌನ್ನ ಉನ್ನಿಕೃಷ್ಣನ್ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಕಿರಣ್ (25) ಮತ್ತು ಯಶವಂತ್ (25) ಎಂದು ಗುರುತಿಸಲಾಗಿದೆ. ಬೈಕ್ನ ಹಿಂಬದಿ ಸವಾರ ಗೌತಮ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ (ಫೆ.24) ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಮೂವರು ಯುವಕರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ನಲ್ಲಿ ತ್ರಿಬಲ್ ರೈಡಿಂಗ್ ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಬೈಕ್ ಚಾಲಕ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶವಂತ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮರಣ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಗೌತಮ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.



