ಆನೇಕಲ್: ರಸ್ತೆಯಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಬೊಲೆರೋ ಕಾರಿಗೆ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಹಲವು ಮೀಟರ್ ದೂರಕ್ಕೆ ಹೋಗಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್-ಚಂದಾಪುರ ರಸ್ತೆಯ ಕಾವಲಹೊಸಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಬೊಲೆರೋ ಕಾರು ರಸ್ತೆಯಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಬೊಲೆರೋ ಕಾರು ರಸ್ತೆಯಲ್ಲಿ ಹಲವು ಮೀಟರ್ ದೂರಕ್ಕೆ ನೂಕಲ್ಪಟ್ಟಿದೆ. ಅಪಘಾತದ ದೃಶ್ಯ ನೋಡಿದರೆ ಡಿಕ್ಕಿಯ ತೀವ್ರತೆ ಎಷ್ಟಿತ್ತು ಎಂಬುದು ಗೊತ್ತಾಗುತ್ತದೆ.
ಆದರೆ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ಮಾಹಿತಿ ಇಲ್ಲ. ಅಪಘಾತದ ದೃಶ್ಯ ಇದೀಗ ಸಿಸಿಟಿವಿ ಮೂಲಕ ಬೆಳಕಿಗೆ ಬಂದಿದೆ.
ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಸ್ತೆ ಅಪಘಾತದ ದೃಶ್ಯ ಸಾರ್ವಜನಿಕರ ಗಮನ ಸೆಳೆದಿದೆ.








