ಉತ್ತರಾಖಂಡ: ಸೇತುವೆಯಿಂದ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.
ಜಿಲ್ಲೆಯ ಗುಲರ್ ಬಜಾರ್ ಸಮೀಪ ಈ ಭೀಕರ ಅಪಘಾತ ನಡೆದಿದೆ. ಅಪಘಾತದ ವೇಳೆ ಬಸ್ನಲ್ಲಿ ಸುಮಾರು 30ರಿಂದ 35 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿವೆ.
ಕಂದಕದಲ್ಲಿ ಸಿಲುಕಿದ್ದ 20 ಮಂದಿ ರಕ್ಷಣೆ!
ಬಸ್ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿಬಿದ್ದಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಸವಾಲು ಎದುರಾಗಿದೆ. ಬ್ಯಾಸಿ ಮತ್ತು ಧಲ್ವಾಲಾ ಕೇಂದ್ರಗಳ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.
ಈವರೆಗೆ ಕಂದಕದಲ್ಲಿ ಸಿಲುಕಿದ್ದ ಸುಮಾರು 20 ಗಾಯಾಳುಗಳನ್ನು ರಕ್ಷಿಸಿ ಮೇಲಕ್ಕೆ ಕರೆತರಲಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು:
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ತೆಹ್ರಿ ಜಿಲ್ಲಾಧಿಕಾರಿ ನಿತಿಕಾ ಖಂಡೇಲ್ವಾಲ್ ಹಾಗೂ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ವೇತಾ ಚೌಬೆ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.









