ಭೋಪಾಲ್: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಧ್ಯಪ್ರದೇಶದಲ್ಲಿ ಎರಡು ಭೀಕರ ಅಗ್ನಿ ಅವಘಡಗಳು ಸಂಭವಿಸಿದ್ದು, ಒಂದೇ ದಿನ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ಕಟ್ನಿ ಮತ್ತು ಸಿಯೋನಿ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಅಗ್ನಿ ದುರಂತಗಳಲ್ಲಿ ತಲಾ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಎರಡು ತಿಂಗಳ ಹಸುಗೂಸು ಕೂಡ ಸೇರಿದ್ದು, ಈ ಘಟನೆಗಳು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿವೆ.

ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಬರ್ಹಿ ಪಟ್ಟಣದಲ್ಲಿ ಸೋಮವಾರ ಮಧ್ಯರಾತ್ರಿ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿದ್ದ ಮಣ್ಣಿನ ಪಾತ್ರೆಗಳ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿದ್ದಾರೆ. ಮೃತರಲ್ಲಿ ಎರಡು ತಿಂಗಳ ಮಗು ಕೂಡ ಸೇರಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಕಟ್ಟಡದಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ.
ಮತ್ತೊಂದೆಡೆ, ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿಯೂ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಚಿನ್ನದಂಗಡಿ ಮಾಲೀಕರಿಗೆ ಸೇರಿದ ಮೂರು ಅಂತಸ್ತಿನ ಮನೆಯಲ್ಲಿ ಮುಂಜಾನೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ.
ಸಿಯೋನಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಮನೆಯೊಳಗೆ ಒಟ್ಟು ಹತ್ತು ಮಂದಿ ಇದ್ದರು. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಆರು ಮಂದಿ ಪ್ರಾಣ ಕಳೆದುಕೊಂಡರೆ, ಉಳಿದ ನಾಲ್ವರು ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವುದು ದುರಂತದ ತೀವ್ರತೆಯನ್ನು ಹೆಚ್ಚಿಸಿದೆ.










