ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಬೆಂಗಳೂರಿನಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್ ಮೊಟೇಬೆನ್ನೂರು ಸಮೀಪ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಇನ್ನು ಅಪಘಾತದ ವೇಳೆ ಪ್ರಯಾಣಿಕರೊಬ್ಬರು ಬಸ್ನ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಹೊರತೆಗೆಯಲು ಅಂಬುಲೆನ್ಸ್ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಪ್ರಯಾಣಿಕನನ್ನು ಸುರಕ್ಷಿತವಾಗಿ ಹೊರಗೆ ತರಲಾಗಿದೆ.
ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬ್ಯಾಡಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










