ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ತಾಯಮ್ಮ (55), ಜ್ಯೋತಿ (28) ಹಾಗೂ ಒಂದೂವರೆ ವರ್ಷದ ಮಗು ದಿವ್ಯ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಲಕ್ಷ್ಮಣ್ ಮತ್ತು ಅವರ ಮತ್ತೊಂದು ಮಗಳು ಸೃಷ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಲಕ್ಷ್ಮಣ್ ಅವರ ಕುಟುಂಬ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮಕ್ಕೆ ಶುಭಕಾರ್ಯಕ್ಕೆ ತೆರಳಿತ್ತು. ಕಾರ್ಯಕ್ರಮ ಮುಗಿಸಿ ಮೆಟ್ರಿ ಗ್ರಾಮಕ್ಕೆ ಬೈಕ್ನಲ್ಲಿ ವಾಪಸ್ ಆಗುತ್ತಿದ್ದಾಗ ಧರ್ಮಸಾಗರ ಗ್ರಾಮದ ಬಳಿ ಹಿಂಬದಿಯಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಗುರುರಾಜ್ ಕಟ್ಟಿಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









