ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಜಮಖಂಡಿ–ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ ಕಂಡಿದ್ದಾರೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ಗಂಡ, ಹೆಂಡತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ (27) ಮತ್ತು ಮಗಳು ಆರಾಧ್ಯ ಕುಂದ್ರಾಳಿ (7) ಎಂದು ಗುರುತಿಸಲಾಗಿದೆ. ಮೂವರು ಮಹಾರಾಷ್ಟ್ರದ Mirajನಿಂದ ಜಮಖಂಡಿ ಕಡೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನಾಶವಾಗಿದ್ದು, ಸ್ಥಳದಲ್ಲೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಹಾರೂಗೇರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಶಾಲಾ ಬಸ್ ದುರಂತ: 4 ವರ್ಷದ ಮಗು ಸಾವು
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ಮೃತ ಮಗುವನ್ನು ಪುನೀತ್ ಎಂದು ಗುರುತಿಸಲಾಗಿದೆ.
ಗಾಜರಕೋಟ ಗ್ರಾಮದ ವಿಸ್ಡಮ್ ಶಾಲೆಯ ವಿದ್ಯಾರ್ಥಿಯಾಗಿದ್ದ ಪುನೀತ್, ಫೆಬ್ರವರಿ 17ರಂದು ಬಸ್‌ನಿಂದ ಇಳಿದ ತಕ್ಷಣ ಚಾಲಕ ರಿವರ್ಸ್ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಈ ವೇಳೆ ಬಸ್ ಮಗುವಿನ ಮೇಲೆ ಹರಿದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಮಗುವಿನ ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದರು. ಬಸ್ ಚಾಲಕನಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ನಂತರ ಪೊಲೀಸರ ಮನವೊಲಿಕೆಯಿಂದ ಪ್ರತಿಭಟನೆ ಕೈಬಿಡಲಾಯಿತು.
ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ
ಬೀದರ್ ಜಿಲ್ಲೆಯ ಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಮ್ನಾಬಾದ್ ತಾಲೂಕಿನ ಸಿಂಧನಕೇರಾದ ಕಾಶೀನಾಥ್ ಹಾಗೂ ಧುಮ್ಮನಸೂರ ನಿವಾಸಿ ನೀತೇಶ್ ಗಾಯಗೊಂಡಿದ್ದು, ಅವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರದ ಉಮ್ಮರ್ಗಾ ಕಡೆಯಿಂದ ಹುಮ್ನಾಬಾದ್ ಕಡೆಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ಪ್ರತ್ಯೇಕ ರಸ್ತೆ ಅಪಘಾತಗಳು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭವಿಸಿರುವುದು ಸಂಚಾರ ಸುರಕ್ಷತೆಯ ಪ್ರಶ್ನೆಯನ್ನು ಮತ್ತೊಮ್ಮೆ ಮುಂದಿಟ್ಟಿದೆ. ಪೊಲೀಸರು ಸಂಬಂಧಿತ ಪ್ರಕರಣಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.



