ಗದಗ:- ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ಟ್ರ್ಯಾಕ್ಟರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಈ ದುರಂತ ನಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ರಫಿಕ್ ನದಾಫ್ (26) ಮೃತ ದುರ್ದೈವಿ. ಮೃತ ಸವಾರನು ಹುಲ್ಲೂರ ಗ್ರಾಮ ಸಹಾಯಕನಾಗಿದ್ದ ಎನ್ನಲಾಗಿದೆ. ಈ ಅಪಘಾತಕ್ಕೆ ಅಕ್ರಮ ಮರಳು ಮಾಫಿಯಾದವರ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಕ್ರಮ ಮರಳು ತಡೆಯಲು ಹೋದ ವೇಳೆ ಈ ಘಟನೆ ನಡೆದಿರಬಹುದು. ಇದನ್ನು ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಗ್ರಾಮ ಸಹಾಯಕರ ಸಂಘದಿಂದ ತಹಶೀಲ್ದಾರ್‌ಗೆ ಮನವಿ ಮಾಡಿದ್ದಾರೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧಿಸಿದ ಟ್ರ‍್ಯಾಕ್ಟರನ್ನು ವಶಕ್ಕೆ ಪಡೆದಿದ್ದಾರೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.