ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಹೊಸಕೋಟೆ–ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ.ಮಾರುತಿ ಒಮ್ನಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಈ ಅಪಘಾತ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಮಾರುತಿ ಒಮ್ನಿ ಕಾರು ಸಂಪೂರ್ಣ ನುಜುಗುಜ್ಜಾಗಿದೆ.
ಮಾರುತಿ ಒಮ್ನಿ ಕಾರಿನ ಚಾಲಕ ಒವರ್ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ನಂತರ ರಸ್ತೆ ಮೇಲೆ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಗುದ್ದಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಘಟನೆ ಹೊಸಕೋಟೆ ತಾಲ್ಲೂಕಿನ ಫ್ಯಾಕ್ಟರಿ ಗೇಟ್ ಸಮೀಪ ಸಂಭವಿಸಿದ್ದು, ಮಾಹಿತಿ ಪಡೆದ ತಕ್ಷಣ ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.



