ಬೆಂಗಳೂರು: ದಕ್ಷಿಣ ಪಿನಾಕಿನಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹವನ್ನು ಹೊರತೆಗೆಯಲು ನೀರಿಗಿಳಿದ ವ್ಯಕ್ತಿಯೂ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುಗಳೂರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ. ಅವರ ಮೃತದೇಹವನ್ನು ಹೊರತೆಗೆಯುವ ಕಾರ್ಯಾಚರಣೆಯ ವೇಳೆ ಮಂಜುನಾಥ್ ಎಂಬುವವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ, ರಕ್ಷಣಾ ಪರಿಕರಗಳನ್ನು ಬಳಸದೆ ಮಂಜುನಾಥ್ ನೀರಿಗಿಳಿದಿದ್ದಾರೆ ಎನ್ನಲಾಗಿದೆ.
ಸರ್ಜಾಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರೂ ಮಂಜುನಾಥ್ ನೀರಿಗಿಳಿಯುವುದನ್ನು ತಡೆಯಲಿಲ್ಲ. ಹೀಗಾಗಿ ಪೊಲೀಸರ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಮಂಜುನಾಥ್ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನು ಕವಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರ ಸಹೋದರಿ ಮುನಿರತ್ನ, ಕವಿತಾ ಮತ್ತು ಶ್ರೀನಿವಾಸ್ ಮದುವೆಯಾಗಿ 15 ವರ್ಷಗಳಾಗಿತ್ತು. ಮದುವೆಯಾದ ದಿನದಿಂದಲೂ ಪತಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.
ಭಾನುವಾರವೂ ದಂಪತಿ ನಡುವೆ ಜಗಳ ನಡೆದಿದ್ದು, ಈ ವೇಳೆ ಕವಿತಾ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದವರು ಮಗುವನ್ನು ರಕ್ಷಿಸಿದ್ದಾರೆ. ಆದರೆ ಕವಿತಾ ನದಿಗೆ ಹಾರಿ ಮೃತಪಟ್ಟಿದ್ದಾರೆ ಎಂದು ಮುನಿರತ್ನ ತಿಳಿಸಿದ್ದಾರೆ. ಕವಿತಾ ಸಾವಿಗೆ ಪತಿ ಶ್ರೀನಿವಾಸ್ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.









