ಲಕ್ನೋ: ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಮುಜಫ್ಫರ್ನಗರ ಜಿಲ್ಲೆಯಲ್ಲಿ ನಡೆದಿದೆ.

ಕಾರಿನಲ್ಲಿದ್ದವರು ಹರಿಯಾಣದ ಜಿಂದ್ ಜಿಲ್ಲೆಯ ನಿವಾಸಿಗಳಾಗಿದ್ದು, ಜಿಂದ್ನಿಂದ ಹರಿದ್ವಾರದ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಜಿಲ್ಲೆಯ ತಿತಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಜಗಾಹೇಡಿ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ಪ್ರಯಾಣದ ವೇಳೆ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ವಾಹನವನ್ನು ಬೆಂಕಿಯ ಜ್ವಾಲೆಗಳು ಆವರಿಸಿವೆ. ಪರಿಣಾಮ ಕಾರಿನಲ್ಲಿದ್ದವರಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ತಿತಾವಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಕಾರಿನೊಳಗೆ ಸಿಲುಕಿದ್ದ ಆರು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ತೀವ್ರತೆಗೆ ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾಡಿಕ್ ಹಾಗೂ ಫುಗಾನಾ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.









