ಗುವಾಹಟಿ: ಅಸ್ಸಾಂನಲ್ಲಿ ಇಂದು ಬೆಳಗ್ಗೆ ಭೀಕರ ರೈಲು ಅವಘಡ ಸಂಭವಿಸಿದೆ.

ಕೋಲ್ಕತ್ತಾದಿಂದ ಮಿಜೋರಾಂಗೆ ತೆರಳುತ್ತಿದ್ದ ಕೋಲ್ಕತ್ತಾ-ಸೈರಾಂಗ್ ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಅಸ್ಸಾಂನ ಡಿಗಾರು ರೈಲು ನಿಲ್ದಾಣದ ಸಮೀಪ ಇಂದು ಬೆಳಗ್ಗೆ 6:54ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಂದು ರೈಲಿಗೆ ದಾರಿ ಮಾಡಿಕೊಡುವ ಸಂದರ್ಭದಲ್ಲಿ ಕೋಲ್ಕತ್ತಾ-ಸೈರಾಂಗ್ ಎಕ್ಸ್ಪ್ರೆಸ್ ರೈಲಿನ ಲೋಕೋ ಪೈಲಟ್ಗೆ ವೇಗ ನಿಯಂತ್ರಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಪರಿಣಾಮ ರೈಲಿನ ಎಂಜಿನ್ ಸೇರಿದಂತೆ ಐದು ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ತಕ್ಷಣ ರಕ್ಷಣಾ ಕಾರ್ಯಾಚರಣೆ:
ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಪ್ರಯಾಣಿಕರ ಪ್ರಯಾಣಕ್ಕೆ ತೊಂದರೆಯಾಗದಂತೆ ರೈಲ್ವೆ ಇಲಾಖೆ ಪರ್ಯಾಯ ರೈಲಿನ ವ್ಯವಸ್ಥೆ ಮಾಡಿದೆ. ಘಟನೆಯ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.










