ಕೈರೋ: ಈಜಿಪ್ಟ್ ರಾಜಧಾನಿ ಕೈರೋ ಸಮೀಪ ಎರಡು ರೈಲುಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 125ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಪೈಕಿ ಓರ್ವ ಲೋಕೋಪೈಲಟ್ ಕೂಡ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರ್ಘಟನೆ ಗಿಜಾ ಪ್ರಾಂತ್ಯದ ಅಲ್-ಅಯ್ಯತ್ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ. ಫಯೂಮ್ ಪ್ರಾಂತ್ಯದತ್ತ ತೆರಳುತ್ತಿದ್ದ ರೈಲು, ಅದೇ ಹಳಿಯಲ್ಲಿ ನಿಂತಿದ್ದ ಕೈರೋ-ಅಸ್ವಾನ್ ರೈಲಿನ ಕೊನೆಯ ಬೋಗಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರೈಲಿನ ಬೋಗಿಗಳು ಜಖಂಗೊಂಡಿದ್ದು, ಪ್ರಯಾಣಿಕರು ಆತಂಕಕ್ಕೊಳಗಾಗಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಹಾನಿಗೊಳಗಾದ ಬೋಗಿಗಳಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ 125ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ 70ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಭೀಕರ ರೈಲು ಅಪಘಾತದ ಬಗ್ಗೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಘಟನೆಯ ಕುರಿತು ತ್ವರಿತ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಅಪಘಾತದ ಸ್ಥಳಕ್ಕೆ ರಕ್ಷಣಾ ತಂಡಗಳು ಹಾಗೂ ಕ್ರೇನ್ಗಳನ್ನು ರವಾನಿಸಲಾಗಿದ್ದು, ಹಾನಿಗೊಳಗಾದ ರೈಲಿನ ಬೋಗಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ರೈಲುಗಳ ನಡುವೆ ಡಿಕ್ಕಿ ಸಂಭವಿಸಲು ನಿಖರ ಕಾರಣವೇನು ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಈಜಿಪ್ಟ್ನಲ್ಲಿ ಸಂಭವಿಸಿದ ಭೀಕರ ರೈಲು ದುರಂತ ದೇಶಾದ್ಯಂತ ಆತಂಕ ಮೂಡಿಸಿದ್ದು, ಮೃತರ ಸಂಖ್ಯೆ ಹಾಗೂ ಅಪಘಾತದ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.










