ಬೀದರ್: ಶಾರ್ಟ್ ಸರ್ಕ್ಯೂಟ್ನಿಂದ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚುಕ್ಕೆಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವೇಗವಾಗಿ ವ್ಯಾಪಿಸಿ ದಟ್ಟ ಹೊಗೆ ಆವರಿಸಿದ್ದರಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮನೆಯ ಅಡುಗೆ ಕೋಣೆ ಹಾಗೂ ಹಾಲ್ಗೆ ಬೆಂಕಿ ವ್ಯಾಪಿಸಿದ್ದು, ಮನೆಯಲ್ಲಿದ್ದ ಫ್ರಿಡ್ಜ್, ದಿನಸಿ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟುಹೋಗಿವೆ. ಘಟನೆಯಿಂದ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೊಳಗಾಗಿವೆ ಎನ್ನಲಾಗಿದೆ.
ಅಗ್ನಿ ಅವಘಡದ ಬಗ್ಗೆ ಗ್ರಾಮಸ್ಥರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿದ್ದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಚಿಟಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

