ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

0
Spread the love

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಮಾತನಾಡಿದರು.

Advertisement

ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು. ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು.

ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು. ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.


Spread the love

LEAVE A REPLY

Please enter your comment!
Please enter your name here