ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಮುಂಭಾಗದಲ್ಲಿ ಇಂದು ಮಧ್ಯಾಹ್ನ ಭೀಕರ ಬೆಂಕಿ ಅವಘಡ ಸಂಭವಿಸಿದೆ.
ಚಲಿಸುತ್ತಿದ್ದ ಕಾರಿಗೆ ಏಕಾಏಕಿಯಾಗಿ ಬೆಂಕಿ ಹೊತ್ತಿಕೊಂಡು ಇಡೀ ವಾಹನ ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದಿದೆ. ಮಾಹಿತಿಯ ಪ್ರಕಾರ, ಕಾರು ಸಂಚರಿಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಮೊದಲಿಗೆ ಕಾರಿನ ಇಂಜಿನ್ ಭಾಗದಿಂದ ಹೊಗೆ ಹೊರಬಂದಿದೆ. ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸುವಷ್ಟರಲ್ಲಿ ಕಾರಿನ ಮುಂಭಾಗದಲ್ಲಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ವಾಹನ ಬೆಂಕಿಗಾಹುತಿಯಾಗಿದೆ. ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಅದೃಷ್ಟವಶಾತ್, ಕಾರಿನಲ್ಲಿದ್ದವರು ಸಮಯಕ್ಕೆ ಸರಿಯಾಗಿ ವಾಹನದಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಕ್ಷಣ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರವನ್ನು ನಿಯಂತ್ರಿಸಿದರು. ಇನ್ನೂ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.



