ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ ಘಟನೆಯಿಂದ ರಾಜ್ಯದ ಮಹಿಳೆಯರಲ್ಲಿ ಭಯ ಮತ್ತು ಆತಂಕ ಉಂಟಾಗಿದೆ. ಇಂತಹ ದುರ್ಘಟನೆಗಳ ಬಳಿಕ ಮುಂದೇನು ಎಂಬ ಚಿಂತೆ ಮಹಿಳೆಯರಲ್ಲಿ ಮೂಡಿರುವುದು ಆತಂಕಕಾರಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿದ ಘಟನೆ ತೀವ್ರ ಖಂಡನೀಯ ಎಂದು ಹೇಳಿದರು.
ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಘಟನೆಗೆ ಕಾರಣಕರ್ತರ ವಿರುದ್ಧ ಕಾನೂನಿನಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಕ್ರಮ ವಹಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವುದರ ಮೂಲಕ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಯಡಿಯೂರಪ್ಪ ತಿಳಿಸಿದರು.



