ಕಲಬುರಗಿ: ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಜನರಲ್ಲಿ ಆತಂಕ ಮೂಡಿಸಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದ ಸಮೀಪ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಲಕ್ಷ್ಮೀಪುತ್ರ ಎಂಬಾತ ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಕೃತ್ಯದ ನಂತರ ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಸಮೀಪದ ಬಾವಿಗೆ ಹಾರಿದ್ದಾನೆ.
ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಧಾವಿಸಿ, ಸಮಯಪ್ರಜ್ಞೆ ಮೆರೆದು ಬಾವಿಗೆ ಇಳಿದು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆದರೆ ಲಕ್ಷ್ಮೀಪುತ್ರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಸುದ್ದಿ ತಿಳಿಯುತ್ತಿದ್ದಂತೆ ರೇವೂರು ಪೊಲೀಸರು ಹಾಗೂ SOCO ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಜಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾವಿಯಿಂದ ಲಕ್ಷ್ಮೀಪುತ್ರನ ಶವವನ್ನು ಹೊರತೆಗೆಯಲಾಗಿದೆ.
ಈ ಸಂಬಂಧ ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮತ್ತು ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



