ಬೆಳಗಾವಿ: ವಿಚ್ಛೇದನ ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿ, ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಲಕ್ಷ್ಮಿ ಮಾಡಮಗೇರಿ (31) ಮೃತಪಟ್ಟಿದ್ದಾರೆ.
ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ರಾಜು ಮಾಡಮಗೇರಿ ವಿರುದ್ಧ ಪತ್ನಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದ್ದು, ಘಟನೆ ಬಳಿಕ ಆತ ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗೆ ಬೈಲಹೊಂಗಲ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಲಕ್ಷ್ಮಿ ಮತ್ತು ರಾಜು ಸುಮಾರು ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ದಂಪತಿ ನಡುವೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ದಾಂಪತ್ಯದಲ್ಲಿ ಸಮಸ್ಯೆ ಮುಂದುವರಿದ ಹಿನ್ನೆಲೆಯಲ್ಲಿ ಲಕ್ಷ್ಮಿ ವಿಚ್ಛೇದನ ಕೇಳಿದ್ದರು ಎಂದು ತಿಳಿದುಬಂದಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮತ್ತಷ್ಟು ಹೆಚ್ಚಾಗಿತ್ತು ಎನ್ನಲಾಗಿದೆ.
ಲಕ್ಷ್ಮಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ರಾಜು, ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಆದರೆ ಮನೆಗೆ ಕರೆದೊಯ್ಯುವ ಬದಲು ಅಮಟೂರ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ರಾಜು ವಿರುದ್ಧ ಕೇಳಿಬಂದಿದೆ.
ಘಟನೆಯ ಬಳಿಕ ರಾಜು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ಬೈಲಹೊಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳು ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.



