ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ ಕ್ಯಾಬಿನೆಟ್‌ನಲ್ಲಿ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಬಗ್ಗೆ ತಮಗೆ ಮಾಧ್ಯಮಗಳ ಮೂಲಕವೇ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು.
“ಸಿದ್ದರಾಮಯ್ಯ ಅವರು ಎಷ್ಟು ವರ್ಷ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟು ವರ್ಷ ಮುಂದುವರಿಯಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಆದರೆ ಸಿದ್ದರಾಮಯ್ಯ ಅವರ ಬಳಿಕ ರಾಜ್ಯ ಕಾಂಗ್ರೆಸ್‌ನ ಮುಂದಿನ ನಾಯಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಬೇಕು ಎಂಬುದು ನಮ್ಮ ಅಭಿಪ್ರಾಯ,” ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯ ರಾಜಕೀಯದಲ್ಲಿ ಸದ್ಯ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ. ಹೈಕಮಾಂಡ್ ನಾಯಕರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಚರ್ಚೆ ನಡೆಸಿದ್ದಾರೆ ಎಂದು ಬಾಲಕೃಷ್ಣ ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಅವರು ಹೇಳಿದರು. ಪಕ್ಷದ ಪರವಾಗಿ ಡಿಕೆಶಿ ಅನೇಕ ಬಾರಿ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ. ಅವರು ಪಕ್ಷದ ಶಿಸ್ತಿನ ಸಿಪಾಯಿ ಎಂದು ಬಾಲಕೃಷ್ಣ ಪ್ರಶಂಸೆ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲ ಸಮುದಾಯಗಳ ನಾಯಕರಿಗೂ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಅಥವಾ ನಾಯಕತ್ವದ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.



