ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ “ಇನ್ನು ಮೊದಲಿನಂತೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ, ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ವಹಿಸುವ ಸಮಯ ಬಂದಿದೆ” ಎಂಬ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸಚಿವ ಸಂಪುಟ ಪುನಾರಚನೆಯ ಕುರಿತು ವದಂತಿಗಳು ಬಲವಾಗಿರುವ ಸಂದರ್ಭದಲ್ಲೇ ಗಡ್ಕರಿ ಈ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.
ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಕೆಲಸಗಳಲ್ಲಿ ತಮ್ಮ ಪಾಲ್ಗೊಳ್ಳುವಿಕೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಕಳೆದ 30 ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುತ್ತಿದ್ದು, ಈ ಅವಧಿಯಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದೇನೆ ಹಾಗೂ ಅನೇಕ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
“ಈಗ ಮೊದಲಿನಷ್ಟು ಕೆಲಸ ಮಾಡಲು ನನ್ನಿಂದ ಸಾಧ್ಯವಿಲ್ಲ. ಹೊಸ ಪೀಳಿಗೆ ಬಂದಿದೆ. ಅವರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು. ಹಳೆಯ ತಲೆಮಾರು ಹೊಸ ತಲೆಮಾರಿಗೆ ಮಾರ್ಗದರ್ಶನ ನೀಡುತ್ತಿದೆ” ಎಂದು ಗಡ್ಕರಿ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳ ವ್ಯಾಪ್ತಿ ಮತ್ತಷ್ಟು ವಿಸ್ತರಿಸಬೇಕಿದೆ ಎಂದಿರುವ ಅವರು, ಮಹಾರಾಷ್ಟ್ರದ ಯಾವುದೇ ಬುಡಕಟ್ಟು ಗ್ರಾಮ ವಿದ್ಯುತ್ ಸಂಪರ್ಕದಿಂದ ವಂಚಿತವಾಗಬಾರದು ಹಾಗೂ ರಾಜ್ಯಾದ್ಯಂತ ಅಭಿವೃದ್ಧಿ ಸ್ಪಷ್ಟವಾಗಿ ಗೋಚರಿಸುವಂತೆ ಮಾಡುವುದು ತಮ್ಮ ಪ್ರಮುಖ ಗುರಿ ಎಂದು ಹೇಳಿದ್ದಾರೆ.
ಗಡ್ಕರಿ ಅವರ ಈ ಹೇಳಿಕೆ ಬಿಜೆಪಿಯ ಇತ್ತೀಚಿನ ಸಂಘಟನಾ ಬದಲಾವಣೆಗಳೊಂದಿಗೆ ತಾಳೆಯಾಗುತ್ತಿರುವುದು ಗಮನಾರ್ಹವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇತೃತ್ವದಲ್ಲಿ ಪಕ್ಷದ ರಾಷ್ಟ್ರೀಯ ತಂಡದಲ್ಲಿ ದೊಡ್ಡ ಮಟ್ಟದ ಬದಲಾವಣೆ ನಡೆದಿದ್ದು, 65 ಸದಸ್ಯರ ತಂಡದಲ್ಲಿ 51 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಮತ್ತು ಮಾಜಿ ಆರ್ಎಸ್ಎಸ್ ಮುಖಂಡ ರಾಮ್ ಮಾಧವ್ ಸೇರಿದಂತೆ 13 ರಾಷ್ಟ್ರೀಯ ಉಪಾಧ್ಯಕ್ಷರನ್ನು ನೇಮಿಸಲಾಗಿದೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಎಂಟು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ನೇಮಕವೂ ನಡೆದಿದೆ.
ಬಿಜೆಪಿಯಲ್ಲಿ ನಡೆಯುತ್ತಿರುವ ಈ ಸಂಘಟನಾ ಪುನಾರಚನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲೂ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಗಡ್ಕರಿ ಅವರ ಹೇಳಿಕೆ ಸಂಪುಟ ಪುನಾರಚನೆಗೂ ಸಂಬಂಧಿಸಿದ ರಾಜಕೀಯ ಅರ್ಥಗಳನ್ನು ಪಡೆದುಕೊಂಡಿದೆ.



