ವಾಷಿಂಗ್ಟನ್: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ವಿಚಾರವನ್ನು ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಟ್ಟಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಶ್ವೇತಭವನದಲ್ಲಿ ಟ್ರಂಪ್ ಅವರನ್ನು ಮೋದಿ ಭೇಟಿ ಮಾಡಿದ್ದು ಇದೇ ವೇಳೆ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮಾತುಕತೆ ಬಳಿಕ ಮಾಧ್ಯಮಗಳ ಜೊತೆ ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಸರ್ಕಾರ ಬದಲಾವಣೆಯಲ್ಲಿ ಅಮೆರಿಕದ ಡೀಪ್ ಸ್ಟೇಟ್ ಪಾತ್ರವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಇದರಲ್ಲಿ ಡೀಪ್ ಸ್ಟೇಟ್ ಪಾತ್ರವಿಲ್ಲ. ಈ ವಿಚಾರದಲ್ಲಿ ಮೋದಿಯವರು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವನ್ನು ನಾನು ಮೋದಿ ಅವರಿಗೆ ಬಿಡುತ್ತೇನೆ ಎಂದಿದ್ದಾರೆ.
ಬಾಂಗ್ಲಾದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ಭಾರತವು ಆ ದೇಶದ ಪರಿಸ್ಥಿತಿಯನ್ನು ಹೇಗೆ ನೋಡುತ್ತದೆ ಎಂಬುದರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ತಮ್ಮ ಕಳವಳಗಳನ್ನು ಹಂಚಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.