ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದರೂ, ಗೃಹಲಕ್ಷ್ಮೀ ಯೋಜನೆಯ ಪ್ರಗತಿ ಇನ್ನೂ ಹೆಚ್ಚಬೇಕಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಕಚೇರಿಯಲ್ಲಿ ನಡೆದ ತಾಲೂಕಿನ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಯ ಶೇ. 100 ಪ್ರಗತಿ ಸಾಧನೆಗೆ ಎಲ್ಲ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವವಾಗಿದೆ. ಪ್ರತಿ ವಾರ್ಡ್‌ಗಳಲ್ಲಿ ನಗರಸಭೆಯ ಸದಸ್ಯರು, ಅಧಿಕಾರಿಗಳು ಮತ್ತು ಸಮಿತಿ ಸದಸ್ಯರ ಸಹಕಾರದೊಂದಿಗೆ ನಗರದ 1ರಿಂದ 35 ವಾರ್ಡ್‌ಗಳಲ್ಲಿ ಯೋಜನೆಯ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು ಎಂದರಲ್ಲದೆ, ವಂಚಿತರಾದವರನ್ನು ಗುರುತಿಸಿ ಮಾಹಿತಿ ಕೊಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು.
ರಾಜ್ಯದಲ್ಲಿಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ತಾಲೂಕು ಅಗ್ರಸ್ಥಾನ ಪಡೆದಿದ್ದು, ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರ ಮಾರ್ಗದರ್ಶನದಲ್ಲಿ ಈ ಪ್ರಗತಿ ಸಾಧ್ಯವಾಗಿದೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಸದಸ್ಯರಾದ ಕೃಷ್ಣಗೌಡ ಪಾಟೀಲ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲೀಕರಿಸುವ ಉದ್ದೇಶ ಹೊಂದಿವೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯುವಲ್ಲಿ ವಿಳಂಬ ಆಗಬಾರದು. ಪ್ರತಿ ವಾರ್ಡ್‌ಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಜುಲೈ 2025ರವರೆಗೆ ಗದಗ ತಾಲೂಕಿನಲ್ಲಿ ಯಜಮಾನಿ ಹೆಸರಿನಲ್ಲಿ ಒಟ್ಟು 82193 ಜನರು ಪಡಿತರ ಹೊಂದಿದ್ದಾರೆ. 81967 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 78986 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶೇ. 96.36ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಶೇ. 100 ಪ್ರಗತಿ ಸಾಧಿಸಲು ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸಬೇಕು ಹಾಗೂ ಪ್ರತಿ ವಾರ್ಡ್‌ಗಳಲ್ಲಿ ಕ್ಯಾಂಪೇನ್ ಮಾಡುವ ಮೂಲಕ ಸೌಲಭ್ಯ ವಂಚಿತರನ್ನು ಮತ್ತು ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಮುಂದಾಗಬೇಕು ಎಂದು ಕೃಷ್ಣಗೌಡ ಪಾಟೀಲ ತಿಳಿಸಿದರು.



