ಬೆಂಗಳೂರು: ರಾಜ್ಯದಲ್ಲಿ ನಾಳೆಯೇ ವಿಧಾನಸಭೆ ಚುನಾವಣೆ ಘೋಷಣೆಯಾದರೆ ಕಾಂಗ್ರೆಸ್‌ನ ಸಚಿವರು ಸೇರಿದಂತೆ ಸುಮಾರು 20ರಿಂದ 25 ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ನಾಯಕ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಹೆಚ್ಚಾಗಿದ್ದು, ಆಡಳಿತ ಪಕ್ಷದ ನಾಯಕರ ನಡುವೆಯೇ ವಿಶ್ವಾಸದ ಕೊರತೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ನಾವು ಕಾಂಗ್ರೆಸ್‌ನ ಯಾವುದೇ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ. ಆದರೆ ನಾಳೆಯೇ ಚುನಾವಣೆ ಘೋಷಣೆಯಾದರೆ ಸಚಿವರು ಸೇರಿದಂತೆ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ರಾಜ್ಯದಲ್ಲಿ ಈಗ ಅಂತಹ ರಾಜಕೀಯ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ಆಡಳಿತ ಪಕ್ಷದೊಳಗೇ ನಾಯಕತ್ವದ ಬಗ್ಗೆ ಅಸಮಾಧಾನವಿದೆ. ಮುಖ್ಯಮಂತ್ರಿಗಳ ಮೇಲೆಯೂ ವಿಶ್ವಾಸದ ಕೊರತೆ ಉಂಟಾಗಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಇದೇ ವೇಳೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನಲ್ಲಿ ಕೆಲವರು ಅಧಿಕಾರವನ್ನು ಕಸಿದುಕೊಳ್ಳಲು ಸ್ಟಿಂಗ್ ಆಪರೇಷನ್ ಮಾಡಿಸಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಕೆಲವರು ಸಚಿವರಾಗಲು, ಮತ್ತೆ ಕೆಲವರು ಮುಖ್ಯಮಂತ್ರಿಯಾಗಲು ಇಂತಹ ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.
ಅಧಿಕಾರಕ್ಕಾಗಿ ಸ್ಟಿಂಗ್ ಆಪರೇಷನ್ ಮಾಡಿಸುವುದು ರಾಜಕೀಯ ವ್ಯಭಿಚಾರಕ್ಕೆ ಸಮಾನ. ಇಂತಹ ಬೆಳವಣಿಗೆಗಳು ಕರ್ನಾಟಕದ ರಾಜಕೀಯದ ದೃಷ್ಟಿಯಿಂದ ಒಳ್ಳೆಯದಲ್ಲ. ರಾಜ್ಯದ ರಾಜಕಾರಣ ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದಿತ್ತು. ಆದರೆ ದುರದೃಷ್ಟವಶಾತ್ ಅಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.
ಯಾರು ಯಾರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿದ್ದಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಬಹಿರಂಗವಾಗಲಿದೆ. ತಪ್ಪು ಕೆಲಸ ಮಾಡಿದವರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. 420 ಕೆಲಸ ಮಾಡಿದವರು ಅನುಭವಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.



