ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರ ಸರ್ಕಾರದ ನೀತಿ ಬಹಿರಂಗವಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟೀಕಿಸಿದ್ದಾರೆ.
ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, “ಕೇಂದ್ರ ಸರ್ಕಾರ ಜನಪರವಾಗಿಲ್ಲ ಎಂಬುದನ್ನು ಇಂಧನ ದರ ಏರಿಕೆಯೇ ತೋರಿಸುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಬಾರದಿತ್ತು” ಎಂದು ಅಭಿಪ್ರಾಯಪಟ್ಟರು.
ಈ ಸಮಸ್ಯೆ ಎದುರಾಗುವ ಸಾಧ್ಯತೆ ಮೊದಲಿನಿಂದಲೂ ಕೇಂದ್ರ ಸರ್ಕಾರಕ್ಕೆ ಗೊತ್ತಿತ್ತು. ಆದರೂ ದರ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಹಿಜಾಬ್ ವಿಚಾರವಾಗಿ ಪ್ರತಿಕ್ರಿಯಿಸಿದ ಡಾ. ಜಿ. ಪರಮೇಶ್ವರ್, ಯಾರು ಏನೇ ಟೀಕೆ ಮಾಡಿದರೂ ಸರ್ಕಾರ ಎಲ್ಲರೂ ಚೆನ್ನಾಗಿರಬೇಕು ಎಂಬ ಉದ್ದೇಶದಿಂದ ಕಾನೂನು ಮತ್ತು ನೀತಿಗಳನ್ನು ರೂಪಿಸುತ್ತದೆ. ಹಿಜಾಬ್ ಹೊಸ ವಿಷಯವಲ್ಲ, ಹಿಂದಿನಿಂದಲೂ ಬಳಸಲಾಗುತ್ತಿತ್ತು. ಮಧ್ಯದಲ್ಲಿ ಕೆಲವರು ಗೊಂದಲ ಸೃಷ್ಟಿಸಿದರು ಎಂದು ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಕುರಿತು ಅನುಮಾನ ವ್ಯಕ್ತಪಡಿಸಿದ ಅವರು, ಎಸ್‌ಐಆರ್ ಬಗ್ಗೆ ನಮಗೂ ಸಂಶಯಗಳಿವೆ. ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಪ್ರಕ್ರಿಯೆ ನಡೆದ ಸ್ಥಳಗಳಲ್ಲಿ ಪ್ರಶ್ನೆಗಳು ಉದ್ಭವಿಸಿವೆ ಎಂದು ತಿಳಿಸಿದರು.



