ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು. ಉಪ್ಪು ತಿಂದವನು ನೀರು ಕುಡಿಯುತ್ತಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು. ಉಪ್ಪು ತಿಂದವನು ನೀರು ಕುಡಿಯುತ್ತಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಬಿಜೆಪಿಯವರು ಈಗ ಮೂಡಾ ನಿವೇಶನದ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ.
ನಾವು ಅವರ ಕಾಲದಲ್ಲಿ ಹೇಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ನಾವು ಹೊರಗೆ ತರುತ್ತಿದ್ದೇವೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದು, ವಿರೋಧ ಪಕ್ಷಗಳ ಬಳಿ ದಾಖಲೆ ಇದ್ದರೆ ಅದನ್ನು ತನಿಖಾಧಿಕಾರಿಗಳಿಗೆ ನೀಡಲಿ. ಆ ಜಮೀನು ಖರೀದಿ ಮಾಡಿದ್ದು, ಅದನ್ನು ದಾನಪತ್ರವಾಗಿ ನೀಡಿದ್ದು ನಿಜವಲ್ಲವೇ? ಅದನ್ನು ಅಕ್ರಮವಾಗಿ ಮೂಡಾದವರು ಬಳಸಿಕೊಂಡಿದ್ದಾರೆ. ಅದಕ್ಕೆ ಪರಿಹಾರ ನೀಡಿದ್ದಾರೆ. ಇದರಲ್ಲಿ ಅವ್ಯವಹಾರ ಏನಿದೆ? ಇಲ್ಲಿ ಅವ್ಯವಹಾರ ನಡೆದಿದ್ದರೆ ಅದು ಬಿಜೆಪಿಯವರ ಕಾಲದಲ್ಲಿ ಆಗಿದೆ ಎಂದು ತಿರುಗೇಟು ನೀಡಿದರು.



