.ಕೊಪ್ಪಳ: ಬಿಜೆಪಿಗೆ ಮತ ಹಾಕಿದರೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಗೆ ಮತ ಹಾಕಿದರೆ ಗೃಹಲಕ್ಷ್ಮಿಯರ ₹2,000 ಹಣ, ಅನ್ನಭಾಗ್ಯ, ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳು ಬಂದ್ ಆಗಲಿವೆ. ನೂರಕ್ಕೆ ನೂರರಷ್ಟು ಈ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಸಚಿವರು ಹೇಳಿದ್ದಾರೆ.
ಬಿಜೆಪಿಯವರು ಉದ್ಯಮಿಗಳ ಸಾಲ ಮನ್ನಾ ಮಾಡುತ್ತಾರೆ. ಆದರೆ ಸಾಮಾನ್ಯ ಜನರು ಮತ್ತು ರೈತರ ಸಾಲವನ್ನು ಏಕೆ ಮನ್ನಾ ಮಾಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಅವರ ಸಾಲ ಮನ್ನಾ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಚುನಾವಣೆಗಾಗಿ ಈ ಮಾತು ಹೇಳುತ್ತಿಲ್ಲ. ಜನರಿಗೆ ಭರವಸೆ ನೀಡಿದಂತೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಬಿಜೆಪಿ ನಾಯಕರು ಆರಂಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಐದೂ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವೂ ರಾಜ್ಯದ ಹಲವು ಯೋಜನೆಗಳನ್ನು ಅನುಸರಿಸುತ್ತಿದೆ. ಬಿಜೆಪಿಯವರು ಹೊಸ ಯೋಜನೆಗಳನ್ನು ರೂಪಿಸುವ ಬದಲು ಇತರರ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂಬ ಬಿಜೆಪಿ ಆರೋಪಕ್ಕೂ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಘೋಷಿಸುವ ಧೈರ್ಯ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ, ಸಚಿವರಾದ ಬಳಿಕ ಜನರಿಗೆ ಸಿಗುವುದಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಶಿವರಾಜ್ ತಂಗಡಗಿ, ವಾರದಲ್ಲಿ ಎರಡರಿಂದ ಮೂರು ದಿನ ಕ್ಷೇತ್ರದಲ್ಲಿ ಇರುವುದಾಗಿ ಹೇಳಿದ್ದಾರೆ.










