ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಚಿನ್ನಾಭರಣಗಳ ಎಣಿಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ಮತ್ತು ಕಳ್ಳತನ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದಲೇ ಸೇವೆಯಿಂದ ವಜಾಗೊಳಿಸಲಾಗಿದೆ.
ದೇಣಿಗೆ ಎಣಿಕೆ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಯನ್ನು ಬದಲಿಸಿ, ಅವರ ಸ್ಥಾನಕ್ಕೆ ಹೊಸ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಜೊತೆಗೆ ಹಣ ಹಾಗೂ ಆಭರಣಗಳ ಎಣಿಕೆ ಪ್ರಕ್ರಿಯೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕಳೆದ ಆರು ದಿನಗಳಿಂದ ಅಯೋಧ್ಯೆಯಲ್ಲೇ ಬೀಡುಬಿಟ್ಟು ಪರಿಶೀಲನೆ ನಡೆಸಿದೆ. ತನಿಖೆಯ ಪ್ರಾಥಮಿಕ ವರದಿಯನ್ನು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಲ್ಲಿಸುವ ಸಾಧ್ಯತೆ ಇದೆ.
ಎಸ್‌ಐಟಿ ತಂಡವು ದೇಣಿಗೆಯ ಹಳೆಯ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು, ನಗದು ಎಣಿಕೆ ವಿಧಾನ, ಆಭರಣಗಳ ದಾಖಲೆ ಸೇರಿದಂತೆ ಹಲವು ಮಾಹಿತಿಗಳನ್ನು ಪರಿಶೀಲಿಸಿದೆ. ಅಲ್ಲದೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ಪ್ರಮುಖರು, ಅರ್ಚಕರು, ಬ್ಯಾಂಕ್ ಅಧಿಕಾರಿಗಳು ಹಾಗೂ ನಗದು ನಿರ್ವಹಣಾ ಸಿಬ್ಬಂದಿ ಸೇರಿದಂತೆ 100ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ತನಿಖೆ ಪೂರ್ಣಗೊಳ್ಳುವವರೆಗೆ ವಿಚಾರಣೆಗೆ ಒಳಗಾದ ಯಾರೂ ಅಯೋಧ್ಯೆ ನಗರವನ್ನು ತೊರೆಯಬಾರದು ಎಂದು ಎಸ್‌ಐಟಿ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಚರ ಎಂದು ಹೇಳಲಾಗುತ್ತಿರುವ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಅವರನ್ನು ಎಸ್‌ಐಟಿ ಹಲವು ಬಾರಿ ವಿಚಾರಣೆ ನಡೆಸಿದೆ. ಅವರ ಆಪ್ತರು, ಸಂಬಂಧಿಕರು ಹಾಗೂ ಆಸ್ತಿಪಾಸ್ತಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಇದೇ ವೇಳೆ, ತನಿಖೆ ಕೇವಲ ಕಾಣಿಕೆ ಹಣದ ದುರುಪಯೋಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ಖರೀದಿಗಳು, ನಿರ್ಮಾಣ ಸಾಮಗ್ರಿಗಳ ವ್ಯವಹಾರಗಳು ಹಾಗೂ ಟ್ರಸ್ಟ್‌ನ ಹಣಕಾಸು ನಿರ್ವಹಣೆಯ ವಿವಿಧ ಅಂಶಗಳ ಬಗ್ಗೆಯೂ ಎಸ್‌ಐಟಿ ಸಮಗ್ರ ತನಿಖೆ ನಡೆಸುತ್ತಿದೆ.



