ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡ ಚಿತ್ರರಂಗದ ಹಾಸ್ಯ ನಟ ಎಂ.ಎಸ್ ಉಮೇಶ್ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಉಮೇಶ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.
ಉಮೇಶ್ ಅವರು ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯತೆ ಪಡೆದಿದ್ದರು. ಇದೀಗ ಅವರ ನಿಧನದಿಂದ ಚಿತ್ರರಂಗದ ಕಲಾವಿದರು ಸೇರಿ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.



