ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಎಸ್‌ಎಸ್‌ಎಲ್‌ಸಿ ಹಂತ ಮಹತ್ವದ ಘಟ್ಟವಾಗಿದ್ದು, ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಭಾರತೀಯ ವೈದ್ಯಕೀಯ ಸಂಘ (ಐಎಂಎ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಐಎಂಎ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗದಗದ ಐಎಂಎ ಸಂಸ್ಥೆಗೆ ಶತಮಾನಕ್ಕೂ ಮೀರಿದ ಇತಿಹಾಸವಿದ್ದು, ಸಮಾಜಕ್ಕೆ ಮರಳಿ ಏನನ್ನಾದರೂ ನೀಡಬೇಕು ಎಂಬ ಧ್ಯೇಯದೊಂದಿಗೆ ವೈದ್ಯರು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಸಾಧಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಸನ್ಮಾನ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವನ್ನು ಐಎಂಎ ಮಾಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಾದಿಯನ್ನು ಮುಂದುವರಿಸಿಕೊಂಡು ಯಶಸ್ಸಿನ ಶಿಖರ ತಲುಪಬೇಕು ಎಂದು ಕರೆ ನೀಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಹಾಗೂ ಕುಲಸಚಿವ ಪ್ರೊ. ಡಾ. ಸುರೇಶ ನಾಡಗೌಡರ ಮಾತನಾಡಿ, ಅಂಕಗಳ ಜೊತೆಗೆ ಉತ್ತಮ ನಡತೆ, ಕೃತಜ್ಞತೆ ಮತ್ತು ಸಂವಹನ ಕೌಶಲ್ಯವೂ ವಿದ್ಯಾರ್ಥಿಗಳ ಯಶಸ್ಸಿಗೆ ಅಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
“ಸಮಾಜಕ್ಕೆ ಕೊಡುಗೆ ನೀಡುವುದರಲ್ಲಿ ಸಿಗುವ ಆತ್ಮತೃಪ್ತಿ ಅತ್ಯಂತ ದೊಡ್ಡದು. ಐಎಂಎ ವೈದ್ಯರು ಶಿಕ್ಷಣ, ಆರೋಗ್ಯ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಿದ್ದಾರೆ.”
ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ



