ವಿಜಯಸಾಕ್ಷಿ ಸುದ್ದಿ, ಗದಗ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಶತಮಾನೋತ್ಸವ ಸಂಭ್ರಮವನ್ನು ಸೆ.13ರಂದು ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಿಟೋರಿಯಂ ಹಾಲ್ನಲ್ಲಿ ಆಯೋಜಿಸಲಾಗಿದೆ ಎಂದು ಐಎಂಎ ಅಧ್ಯಕ್ಷ ಡಾ. ಶ್ರೀಧರ ಕುರಡಗಿ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಡಾ. ಆರ್.ವಿ. ಅಶೋಕನ್ ಹಾಗೂ ಡಾ. ವೀರಭದ್ರಯ್ಯ ಟಿ.ಎ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಶಾಸಕ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶತಮಾನೋತ್ಸವದ ಅಂಗವಾಗಿ ಜಿಲ್ಲೆಯ 100 ಶಾಲೆಗಳಿಗೆ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಗುವುದು. ಈಗಾಗಲೇ ಮಹಿಳಾ ವೈದ್ಯರ ತಂಡ ಹಲವು ಶಾಲಾ–ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಆರೋಗ್ಯದ ಕುರಿತು ಮಾಹಿತಿ ಹಾಗೂ ಅರಿವು ಮೂಡಿಸಿದೆ ಎಂದು ತಿಳಿಸಿದರು.



