ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಮುಂದಾಗಿರುವ ಪ್ರತಿಪಕ್ಷಗಳ ವಿರುದ್ಧ ರಣತಂತ್ರ ರೂಪಿಸಲು ಇಂದು ಬೆಳಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು.
ದೆಹಲಿಯಿಂದ ವಾಪಾಸ್ ಆಗಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗಾಗಿ ಕಾವೇರಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ ಸದ್ಯ ಸಿಎಂ ನಡೆ ತೀವ್ರ ಕುತೂಹಲ ಮೂಡಿಸಿದೆ.
ಇನ್ನು ಆಗಸ್ಟ್ 4ರಂದು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕೆಲ ಸಚಿವರ ಬದಲಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಲಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ, ರಾಜ್ಯದ ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ಚರ್ಚಿಸಿದ್ದಾರೆ.