ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಭಿಯಾನದಡಿ ಸ್ವ-ಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ ಕಫೆ ರೂಪಿಸಲಾಗಿದ್ದು, ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹೇಳಿದರು.
ಅವರು ಜಿಲ್ಲಾ ಪಂಚಾಯಿತಿ ಬಳಿಯ ಕಟ್ಟಡದಲ್ಲಿ ಕಬ್ಬೆನೂರು ಗ್ರಾಮದ ಕಾಮಧೇನು ಮಹಿಳಾ ಸ್ವ-ಸಹಾಯ ಸಂಘ ಆರಂಭಿಸಿರುವ ಅಕ್ಕ ಕಫೆ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ರಾಜ್ಯ ಸರ್ಕಾರವು 2024–25ನೇ ಸಾಲಿನ ಆಯವ್ಯಯದಲ್ಲಿ ಅಕ್ಕ ಕಫೆ ಕಾರ್ಯಕ್ರಮವನ್ನು ಘೋಷಿಸಿದೆ. ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲು ಮಹಿಳೆಯರೇ ನಡೆಸುವ 50 ಕಫೆ ಸಂಜೀವಿನಿ (ಅಕ್ಕ ಕಫೆ) ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ಅದರಂತೆ ಧಾರವಾಡ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನ ಮತ್ತು ಎಲ್ಲ ತಾಲೂಕು ಕೇಂದ್ರ ಸ್ಥಾನಗಳಲ್ಲಿ ಅಕ್ಕ ಕಫೆಯನ್ನು ಆರಂಭಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ನವಲಗುಂದ ಶಾಸಕ ಎನ್. ಎಚ್. ಕೋನರಡ್ಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ್, ಪ್ರಭಾರ ಜಿಲ್ಲಾಧಿಕಾರಿ, ಜಿ. ಪಂ ಸಿಇಓ ಭುವನೇಶ ದೇವಿದಾಸ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪ್ರೋಬೆಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕಾಮಧೇನು ಮಹಿಳಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ರಾಜಶ್ರೀ ಮಂಜುನಾಥ ಪವಾಡಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.



