ICC ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ರೋಹಿತ್ ಶರ್ಮಾ ನೇತೃತ್ವದ ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ 49.4 ಓವರ್‌ಗಳಿಗೆ ಆಲೌಟ್ ಆಗಿ 228 ರನ್ ಗಳಿಸಿತು. 229 ರನ್ ಗುರಿ ಬೆನ್ನತ್ತಿದ ಟೀಂ ಇಂಡಿಯಾ 46.3 ಓವರ್‌ಗಳಿಗೆ 4 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಗೆಲುವು ದಾಖಲಿಸಿದೆ.
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ, ಶುಭಮನ್ ಗಿಲ್ ಜೋಡಿ ಉತ್ತಮ ಪ್ರದರ್ಶನ ನೀಡಿತು. ಇಬ್ಬರೂ ಸೇರಿ ಮೊದಲ ವಿಕೆಟ್‌ಗೆ 9.5 ಓವರ್‌ಗಳಲ್ಲಿ 69 ರನ್‌ಗಳನ್ನು ಸೇರಿಸಿದರು. ರೋಹಿತ್ 36 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 41 ರನ್ ಗಳಿಸಿ ತಸ್ಕಿನ್ ಅಹ್ಮದ್ ಬೌಲಿಂಗ್‌ನಲ್ಲಿ ಔಟಾದರು. ಇದಾದ ನಂತರ ವಿರಾಟ್ ಕೊಹ್ಲಿ 22 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.
ವಿರಾಟ್ ಕೊಹ್ಲಿ ನಂತರ, ಶ್ರೇಯಸ್ ಅಯ್ಯರ್ 17 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ 15 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಅಕ್ಸರ್ ಪಟೇಲ್ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಅವರು 12 ಎಸೆತಗಳಲ್ಲಿ 1 ಬೌಂಡರಿಯೊಂದಿಗೆ 8 ರನ್ ಗಳಿಸಿ ಔಟಾದರು. ಬಳಿಕ ಬಂದ ಕೆಎಲ್ ರಾಹುಲ್ ಅವರು ಶುಭಮನ್ ಗಿಲ್‌ಗೆ ಬೆಂಬಲ ನೀಡಿದರು. ಇಬ್ಬರೂ ಐದನೇ ವಿಕೆಟ್‌ಗೆ 87 ರನ್‌ಗಳ ಅಜೇಯ ಜೊತೆಯಾಟ ಆಡುವ ಮೂಲಕ ಭಾರತಕ್ಕೆ 6 ವಿಕೆಟ್‌ಗಳ ಜಯ ತಂದುಕೊಟ್ಟರು.