ವಿಶಾಖಪಟ್ಟಣ: ಭಾರತ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಎರಡು ಪಂದ್ಯಗಳಲ್ಲಿ, ಇನಿಂಗ್ಸ್‌ನ ಮೊದಲ ಎಸೆತದಲ್ಲೇ ಬ್ಯಾಟರ್‌ಗಳನ್ನು ಔಟ್ ಮಾಡಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಟ್ ಹೆನ್ರಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಜನವರಿ 25ರಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಸಹ ಮೊದಲ ಎಸೆತದಲ್ಲೇ ಔಟ್ ಮಾಡಿದ್ದರು.
ಈ ಮೂಲಕ ಒಂದೇ ಸರಣಿಯಲ್ಲಿ ಇಬ್ಬರು ಆರಂಭಿಕ ಬ್ಯಾಟರ್‌ಗಳನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರದ ಮೊದಲ ಬೌಲರ್ ಎಂಬ ಗೌರವಕ್ಕೂ ಮ್ಯಾಟ್ ಹೆನ್ರಿ ಪಾತ್ರರಾದರು.
ಪಂದ್ಯದ ವಿಚಾರಕ್ಕೆ ಬಂದರೆ, ಮೊದಲು ಬ್ಯಾಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್‌ಗಳಲ್ಲಿ 215 ರನ್‌ಗಳನ್ನು ಕಲೆಹಾಕಿತು. ಈ ದೊಡ್ಡ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 165 ರನ್‌ಗಳಿಗೆ ಆಲೌಟ್ ಆಯಿತು. ಪರಿಣಾಮ ನಾಲ್ಕನೇ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 50 ರನ್‌ಗಳ ಭರ್ಜರಿ ಜಯ ದಾಖಲಿಸಿತು.



